ಬೆಂಗಳೂರು: ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
ಮಾಹಿತಿಯ ಪ್ರಕಾರ, ವಿದ್ಯಾರ್ಥಿನಿಯೊಬ್ಬಳು ಬೆಳಗಿನ ಜಾವ ತನ್ನ ಪಿಜಿಯಿಂದ ಹೊರಬಂದು ಟೀ ಕುಡಿಯಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಆಕೆಯನ್ನು ಗಮನಿಸಿದ್ದಾನೆ. ಬಳಿಕ ಯುವತಿಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ವೇಳೆ ಯುವತಿ ಜೋರಾಗಿ ಕಿರುಚಿಕೊಂಡಿದ್ದು, ಆಕೆಯ ಕಿರುಚಾಟ ಕೇಳಿದ ಸ್ಥಳೀಯರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜನರು ಬರುತ್ತಿರುವುದನ್ನು ಗಮನಿಸಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.
ಘಟನೆಯ ಬಳಿಕ ವಿದ್ಯಾರ್ಥಿನಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಸೈಬುಲ್ ಎಂದು ಗುರುತಿಸಲಾಗಿದ್ದು, ಆತ ರಸ್ತೆ ಬದಿಯಲ್ಲಿ ಕಸ ಹಾಗೂ ಕಬ್ಬಿಣ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಒಂಟಿಯಾಗಿ ತೆರಳುತ್ತಿದ್ದ ಯುವತಿಯನ್ನು ಕಂಡು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ವೈಟ್‌ಫೀಲ್ಡ್ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.