ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಹಾಗೂ ಬಡವರ ಬಂಧು ಆಸ್ಪತ್ರೆಯೆಂದು ಹೆಸರುವಾಸಿಯಾಗಿರುವ ಕೆಎಂಸಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ-ಗ್ರೂಪ್ ಸಿಬ್ಬಂದಿಗಳು ಹಲವು ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿರುವ ಆರೋಪ ಕೇಳಿಬಂದಿದೆ.
ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸಂಬಂಧಿಸಿದ ಏಜೆನ್ಸಿಯಿಂದ ಭವಿಷ್ಯ ನಿಧಿ (PF), ನೌಕರರ ರಾಜ್ಯ ವಿಮೆ (ESI), ಸಮರ್ಪಕ ವೇತನ ಸೇರಿದಂತೆ ಕಾನೂನುಬದ್ಧವಾಗಿ ದೊರೆಯಬೇಕಾದ ವಿವಿಧ ಸೌಲಭ್ಯಗಳು ಸರಿಯಾಗಿ ದೊರೆಯುತ್ತಿಲ್ಲ ಎಂದು ಸಿಬ್ಬಂದಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಅನೇಕ ಸಿಬ್ಬಂದಿಗಳು ಆರ್ಥಿಕ ಹಾಗೂ ವೃತ್ತಿಪರ ಸಂಕಷ್ಟಗಳನ್ನು ಎದುರಿಸುವಂತಾಗಿದೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದಕ್ಕೆ ಸಿಬ್ಬಂದಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಸ್ವಚ್ಛತೆ ಹಾಗೂ ನಿರ್ವಹಣೆಯಲ್ಲಿ ಡಿ-ಗ್ರೂಪ್ ಸಿಬ್ಬಂದಿಗಳ ಪಾತ್ರ ಮಹತ್ವದ್ದಾಗಿದ್ದು, ಅವರ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಆಸ್ಪತ್ರೆಯ ಕಾರ್ಯವೈಖರಿಯ ಮೇಲೆಯೇ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಿಬ್ಬಂದಿಗಳು ಅಭಿಪ್ರಾಯಪಟ್ಟಿದ್ದಾರೆ.
ಸಿಬ್ಬಂದಿಗಳ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಹುಬ್ಬಳ್ಳಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ನಿರ್ದೇಶಕ ಎಚ್.ಎಫ್. ಕಮ್ಮಾರ ಅವರನ್ನು ಭೇಟಿಯಾಗಿ ಸಿಬ್ಬಂದಿಗಳ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.
ಸಭೆಯಲ್ಲಿ ಸಿಬ್ಬಂದಿಗಳಿಗೆ ಸಮರ್ಪಕ ವೇತನ, ಪಿಎಫ್, ಇಎಸ್‌ಐ ಸೇರಿದಂತೆ ಕಾನೂನುಬದ್ಧವಾಗಿ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಆಸ್ಪತ್ರೆಯ ಅಧಿಕಾರಿಗಳು ಸಿಬ್ಬಂದಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮುಂದಾಗುವುದಾಗಿ ಭರವಸೆ ನೀಡಿದರು.
ಇನ್ನೂ ಮುಂದೆಯೂ ಸಿಬ್ಬಂದಿಗಳಿಗೆ ಸೂಕ್ತ ಸೌಲಭ್ಯಗಳು ದೊರೆಯದಿದ್ದಲ್ಲಿ, ಸಂಬಂಧಪಟ್ಟ ಉನ್ನತ ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದು ಆಸ್ಪತ್ರೆ ಆಡಳಿತದ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಹುಬ್ಬಳ್ಳಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.