ಕರ್ನಾಟಕ

ನಾಗರಿಕಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಿ: ಡಾ. ರಾಮ್ ಪ್ರಸಾತ್ ಮನೋಹರ

ಮೂಲಕ News Desk | ಪ್ರಕಟಿಸಲಾಗಿದೆ June 12, 2026 June 12, 2026 | 10:58 AM 9 ವೀಕ್ಷಣೆಗಳು


ಧಾರವಾಡ, ಜೂ.11: ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ಒದಗಿಸಿ ನಾಗರಿಕಸ್ನೇಹಿ ಆಡಳಿತಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಗಾರು ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ರೈತರಿಗೆ ಬೀಜ-ರಸಗೊಬ್ಬರ ಕೊರತೆಯಾಗದಂತೆ ಕ್ರಮವಹಿಸುವುದು, ಎಲ್ಲ ರೈತರನ್ನು ಫ್ರೂಟ್ಸ್ ಐಡಿ ನೋಂದಣಿಗೆ ಒಳಪಡಿಸುವುದು ಹಾಗೂ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳಗಳಿಂದ 35 ಗ್ರಾಮ ಪಂಚಾಯಿತಿಗಳ 56 ಗ್ರಾಮಗಳು ಪ್ರವಾಹದ ಅಪಾಯಕ್ಕೆ ಒಳಪಡುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ 71 ಕಾಳಜಿ ಕೇಂದ್ರಗಳು ಹಾಗೂ 6 ಗೋಶಾಲೆಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ 22 ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಸ್ತುತ 45 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಸಿಇಒ ಭುವನೇಶ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.