ಕರ್ನಾಟಕ

ಹುಬ್ಬಳ್ಳಿ ಪೂರ್ವ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಲು ವ್ಯಾಪಾರಿಗಳ ಆಗ್ರಹ

ಮೂಲಕ News Desk | ಪ್ರಕಟಿಸಲಾಗಿದೆ June 20, 2026 June 20, 2026 | 07:55 AM 22 ವೀಕ್ಷಣೆಗಳು

ಹುಬ್ಬಳ್ಳಿ: ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ನಗರದ ವ್ಯಾಪಾರಿಗಳು ಒತ್ತಾಯಿಸಿದ್ದಾರೆ.


ನಗರದ ಜವಳಿಸಾಲ ಹಿರೇಪೇಟೆ ವೃತ್ತದಲ್ಲಿ ನಡೆದ ಸಮೂಹ ವರ್ತಕರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.


ಸಭೆಯಲ್ಲಿ ಮಾತನಾಡಿದ ಮುಖಂಡರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಹುಬ್ಬಳ್ಳಿ ಪೂರ್ವ ಕ್ಷೇತ್ರದಿಂದ ಸತತ ಮೂರು ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ದಾಖಲಿಸಿರುವುದಲ್ಲದೆ, ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಅವರಂತಹ ಅನುಭವಿಗಳಾದ ನಾಯಕರಿಗೆ ಸಚಿವ ಸ್ಥಾನ ನೀಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.


ಈ ಭಾಗಕ್ಕೆ ಸಚಿವ ಸ್ಥಾನ ದೊರೆತಲ್ಲಿ ಸರ್ಕಾರದ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗಲಿದೆ ಎಂದು ವ್ಯಾಪಾರಿಗಳು ತಿಳಿಸಿದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ತಾರಾದೇವಿ ವಾಲಿ, ವಿಜಯಕುಮಾರ್ ಅಳಗುಂಡಗಿ, ಚಂದ್ರಶೇಖರ ಅಳಗುಂಡಗಿ, ಅನ್ವರ ಮುಧೋಳ, ಮೋಹನ ಸವಣೂರ, ಗೌತಮ ಜೈನ್, ಗೋವಿಂದ ಶರ್ಮಾ, ತೇಜಾರಾಮ್ ಪಾಟೀಲ್, ನರೇಂದ್ರ ಜೈನ್, ಲಲಿತ ಜೈನ್ ಹಾಗೂ ಪತ್ರಕರ್ತ ಜಗದೀಶ್ ಬುರ್ಲಬುಡ್ಡಿ ಸೇರಿದಂತೆ ವರ್ತಕರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.