ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಪಟ್ಟಣ ಸಮೀಪದ ಕಾವೇರಿ ಕ್ರಷರ್‌ನಲ್ಲಿ ನಡೆದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ.
ಲಭ್ಯವಾದ ಪ್ರಾಥಮಿಕ ಮಾಹಿತಿಯ ಪ್ರಕಾರ, ಕಲ್ಲು ಕ್ವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಮೇಲ್ಭಾಗದಲ್ಲಿದ್ದ ಬೃಹತ್ ಬಂಡೆಯನ್ನು ಟ್ರ್ಯಾಕ್ಟರ್ ಸಹಾಯದಿಂದ ಜರುಗಿಸಲಾಗುತ್ತಿತ್ತು. ಈ ವೇಳೆ ಬಂಡೆ ನಿಯಂತ್ರಣ ತಪ್ಪಿ ಕೆಳಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಬಿಹಾರ ಮೂಲದ ವಲಸೆ ಕಾರ್ಮಿಕರಾಗಿದ್ದು, ದುರಂತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡು ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ತಾವರೆಕೆರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಾರುತಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ವಾರಿ ಕಾಮಗಾರಿಯ ಗುತ್ತಿಗೆ ಪಡೆದ ಮೇಸ್ತ್ರಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವೇ ಎಂಬ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.
ಅಪಘಾತದ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.