ಹಾವೇರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಪರಿಶೀಲನಾ ಕಾರ್ಯ ಆರಂಭವಾಗಿದ್ದು, ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ ಹೆಸ್ಕಾಂ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಎಸ್. ಖಾದ್ರಿ ಮನವಿ ಮಾಡಿದರು.
ಜಿಲ್ಲೆಯ ಶಿಗ್ಗಾಂವ ಪಟ್ಟಣದ ಮೆಹಬೂಬ್ ನಗರದಲ್ಲಿ ಗುರುವಾರ ನಡೆಯುತ್ತಿದ್ದ ಗೃಹಜ್ಯೋತಿ ಫಲಾನುಭವಿಗಳ ದಾಖಲೆ ಪರಿಶೀಲನಾ ಕಾರ್ಯವನ್ನು ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಗೃಹಜ್ಯೋತಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುತ್ತಿದ್ದು, ಈ ಯೋಜನೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ಪಡೆದಿದೆ ಎಂದು ಹೇಳಿದರು.
ಹೆಸ್ಕಾಂ ವ್ಯಾಪ್ತಿಯಲ್ಲಿ ಜುಲೈ 1ರಿಂದ ಮನೆ-ಮನೆಗೆ ತೆರಳಿ ಫಲಾನುಭವಿಗಳ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಈ ವೇಳೆ ಫಲಾನುಭವಿಗಳು ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದ ಪತ್ರ (ಅನ್ವಯಿಸುವಲ್ಲಿ), ರೇಷನ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೆಸ್ಕಾಂ ಸಿಬ್ಬಂದಿಗೆ ನೀಡಬೇಕು ಎಂದು ತಿಳಿಸಿದರು.
ಮನೆ ಮಾಲೀಕರು ಅಥವಾ ಬಾಡಿಗೆದಾರರಿಂದ ಮಾಹಿತಿ ಪಡೆದು ಸೇವಾ ಸಿಂಧು ತಂತ್ರಾಂಶದಲ್ಲಿ ದಾಖಲು ಮಾಡುವ ಕಾರ್ಯ ನಡೆಯುತ್ತಿರುವುದರಿಂದ ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಿಬ್ಬಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗೃಹಜ್ಯೋತಿ ಯೋಜನೆಯ ದಾಖಲೆ ಪರಿಶೀಲನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದ ಸೈಯದ್ ಅಜೀಮ್‌ಪೀರ್ ಎಸ್. ಖಾದ್ರಿ, ಸ್ವತಃ ಒಂದು ಅರ್ಜಿಯನ್ನು ಭರ್ತಿ ಮಾಡಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಹೆಸ್ಕಾಂ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.