ನಿಪ್ಪಾಣಿ, ಜು. 7: ರಾಷ್ಟ್ರೀಯ ಹೆದ್ದಾರಿ–48ರ ಸ್ಥವನಿಧಿ ಘಾಟ್ ಸಮೀಪ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ ಸೋಯಲ್ ಮುನೇರ (36) ಹಾಗೂ ಇಂಚಲಕರಂಜಿ ಗ್ರಾಮದ ವಿನಯ ಪಾಟೀಲ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಬ್ರೇಕ್ ವೈಫಲ್ಯಗೊಂಡ ಟ್ರಕ್ ಮುಂದೆ ಸಾಗುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.