ಹುಬ್ಬಳ್ಳಿ, ಜು. 11: ನಗರದಲ್ಲಿ 14 ವರ್ಷದ ಅಪ್ರಾಪ್ತೆಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ತಾಯಿ ಮತ್ತು ನವಜಾತ ಶಿಶು ಇಬ್ಬರೂ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆಸ್ಪತ್ರೆಯ ಮೂಲಗಳ ಪ್ರಕಾರ, ಅಪ್ರಾಪ್ತೆಯನ್ನು ಜುಲೈ 8ರಂದು ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಕೆಗೆ ಮನೆಯಲ್ಲಿಯೇ ಹೆರಿಗೆ ಆಗಿರುವ ಸಾಧ್ಯತೆ ಇದ್ದು, ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗೆ ನವಜಾತ ಶಿಶುವಿನೊಂದಿಗೆ ಕೆಎಂಸಿಆರ್‌ಐ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.
ಅಪ್ರಾಪ್ತೆ ಆಗಿರುವ ಹಿನ್ನೆಲೆಯಲ್ಲಿ ಆಕೆಗೆ ಆಸ್ಪತ್ರೆಯ ನಿರ್ಭಯಾ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ತಾಯಿ ಹಾಗೂ ಮಗು ಇಬ್ಬರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಪ್ರಾಪ್ತೆ ಯಾವಾಗ ಗರ್ಭಿಣಿಯಾಗಿದ್ದಳು ಹಾಗೂ ಹೆರಿಗೆಯ ನಿಖರ ದಿನಾಂಕ ಸೇರಿದಂತೆ ಹಲವು ಮಾಹಿತಿಗಳು ಇನ್ನೂ ಸ್ಪಷ್ಟವಾಗಿಲ್ಲ ಎಂದು ತಿಳಿಸಲಾಗಿದೆ.
ಪ್ರಕರಣದ ಸಂಬಂಧ ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಯೂ ಅಪ್ರಾಪ್ತನಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಕುರಿತು ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ.
ಇನ್ನೊಂದೆಡೆ, ಕೆಲವು ಸಂಘಟನೆಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಜೀವಕ್ಕೆ ಅಪಾಯವಿದ್ದು, ಆರೋಪಿತನ ಕಡೆಯಿಂದ ಜೀವ ಬೆದರಿಕೆ ಇದೆ ಎಂದು ಆರೋಪಿಸಿವೆ. ಈ ಕುರಿತು ಸಮಗ್ರ ತನಿಖೆ ನಡೆಸಿ ಬಾಲಕಿಗೆ ಅಗತ್ಯ ರಕ್ಷಣೆ ಒದಗಿಸಬೇಕು ಎಂದು ಅವು ಒತ್ತಾಯಿಸಿವೆ.
ಘಟನೆ ಹಲವು ದಿನಗಳವರೆಗೆ ಸಾರ್ವಜನಿಕರ ಗಮನಕ್ಕೆ ಬಾರದೆ ಇರುವುದು ಕೂಡ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣದ ಸಂಪೂರ್ಣ ಸತ್ಯಾಂಶವು ಪೊಲೀಸ್ ತನಿಖೆ ಪೂರ್ಣಗೊಂಡ ಬಳಿಕವೇ ಬಹಿರಂಗವಾಗುವ ನಿರೀಕ್ಷೆಯಿದೆ.