ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಭೂಷಣ್ ಗುಲಾಬ್ರಾವ್ ಬೋರಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಬೆಳಗಾವಿ ನಗರದ ಉಪ ಪೊಲೀಸ್ ಮಹಾನಿರೀಕ್ಷಕ ಹಾಗೂ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ್ ಗುಲಾಬ್ರಾವ್ ಬೋರಸೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಸರ್ಕಾರದ ಆದೇಶದಂತೆ, ಮುಂದಿನ ಆದೇಶದವರೆಗೆಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಮಹಾನಿರೀಕ್ಷಕರಾಗಿ ಬೋರಸೆ ಅವರು ಕಾರ್ಯನಿರ್ವಹಿಸಲಿದ್ದಾರೆ.
ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಎನ್. ಶಶಿಕುಮಾರ್, ಐಪಿಎಸ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಭೂಷಣ್ ಬೋರಸೆ ಅವರನ್ನು ನೇಮಕ ಮಾಡಲಾಗಿದೆ.
ನೂತನ ಪೊಲೀಸ್ ಆಯುಕ್ತರ ನೇಮಕದೊಂದಿಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಆಡಳಿತದಲ್ಲಿ ಮತ್ತಷ್ಟು ಬದಲಾವಣೆಗಳ ನಿರೀಕ್ಷೆ ಮೂಡಿದೆ.