ಕ್ರೈಂ

ಹೊಸ ಕಮಿಷನರ್ ಎಫೆಕ್ಟ್: ಹುಬ್ಬಳ್ಳಿಯಲ್ಲಿ ಸಿಸಿಬಿ ದಾಳಿ, ನಾಲ್ವರ ಬಂಧನ

ಮೂಲಕ News Desk | ಪ್ರಕಟಿಸಲಾಗಿದೆ September 6, 2026 September 6, 2026 | 11:59 AM 133 ವೀಕ್ಷಣೆಗಳು

ಹುಬ್ಬಳ್ಳಿ: ಹೊಸ ಪೊಲೀಸ್ ಕಮಿಷನರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆ ಸಮೀಪದ ಪಾರ್ಕಿಂಗ್ ಸ್ಥಳದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.


ಖಚಿತ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾಂತೇಶ್ ಹೊಸಮನಿ, ಅಲಿನಾ, ಫಯಾಜ್ ಉಂಟವಾಲೆ ಹಾಗೂ ಶೋಯಬ್ ಧಾರವಾಡ ಎಂಬ ನಾಲ್ವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.


ಆರೋಪಿಗಳಿಂದ 6.135 ಕೆಜಿ ಗಾಂಜಾ, ನಾಲ್ಕು ಮೊಬೈಲ್ ಫೋನ್‌ಗಳು ಹಾಗೂ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಥಳದ ಸಮೀಪ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಸಂಬಂಧ ಹುಬ್ಬಳ್ಳಿಯ ಶಹರ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಧಿತ ನಾಲ್ವರನ್ನು ಮುಂದಿನ ಕಾನೂನು ಪ್ರಕ್ರಿಯೆಗೆ ಒಳಪಡಿಸಲಾಗಿದೆ.


ಹೊಸ ಪೊಲೀಸ್ ಕಮಿಷನರ್ ಅಧಿಕಾರ ವಹಿಸಿಕೊಂಡ ಬಳಿಕ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆ ಮತ್ತೆ ಚುರುಕುಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದೆ. ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಇದೀಗ ನಿರೀಕ್ಷೆ ಹೆಚ್ಚಾಗಿದೆ.