ಇಂಡಿಯಾ

ರಾಷ್ಟ್ರೀಯ ಪಕ್ಷಿ ನವಿಲು ಬೇಟೆ ಆರೋಪ: 7 ಮಂದಿ ಅಂದರ್..!

ಮೂಲಕ News Desk | ಪ್ರಕಟಿಸಲಾಗಿದೆ September 14, 2026 September 14, 2026 | 10:43 AM 226 ವೀಕ್ಷಣೆಗಳು

ಯಾದಗಿರಿ: ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೇಟೆಯಾಡುತ್ತಿದ್ದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಏಳು ಮಂದಿಯನ್ನು ಬಂಧಿಸಿರುವ ಘಟನೆ ಯಾದಗಿರಿ ತಾಲೂಕಿನ ಮೋಟ್ನಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.


ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಬೇಟೆಯಾಡುತ್ತಿದ್ದ ತಂಡವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ನಾಡಬಂದೂಕುಗಳು ಸೇರಿದಂತೆ ಬೇಟೆಗೆ ಬಳಸುತ್ತಿದ್ದ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.


ಆರೋಪಿಗಳು ಅರಣ್ಯ ಪ್ರದೇಶದಲ್ಲಿ ರಾಷ್ಟ್ರೀಯ ಪಕ್ಷಿ ನವಿಲು ಹಾಗೂ ಆಮೆಯನ್ನು ಬೇಟೆಯಾಡಿ, ಸ್ಥಳದಲ್ಲೇ ಅಡುಗೆ ಮಾಡಿ ಸೇವಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.


ಬಂಧಿತರನ್ನು ನಿಂಗಪ್ಪ, ವಾಸುದೇವ, ಕರೆಪ್ಪ, ಕಾಂತಪ್ಪ, ಯಲ್ಲಾಲಿಂಗ, ಬಸವರಾಜ್ ಹಾಗೂ ಮಲ್ಲಪ್ಪ ಎಂದು ಗುರುತಿಸಲಾಗಿದೆ. ಬಂಧಿತರೆಲ್ಲರೂ ಚಿತ್ತಾಪುರ ತಾಲೂಕಿನ ಭೀಮನಳ್ಳಿ ಗ್ರಾಮದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ವನ್ಯಜೀವಿಗಳನ್ನು ಅಕ್ರಮವಾಗಿ ಬೇಟೆಯಾಡಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.


ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಬೇಟೆ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಧಕ್ಕೆ ತರುವ ಚಟುವಟಿಕೆಗಳ ವಿರುದ್ಧ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿಸಿದೆ.