ಮಂಗಳೂರು: ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಮಹತ್ವದ ತೀರ್ಪು ಪ್ರಕಟಿಸಿದೆ.
ಸುನೀಲ್ ಕುಮಾರ್ ಅಲಿಯಾಸ್ ಕೌಟಿ, ಪ್ರವೀಣ್ ಪೂಜಾರಿ ಅಲಿಯಾಸ್ ಚೋಟು ಹಾಗೂ ಪ್ರೀತಮ್ ಅಲಿಯಾಸ್ ಅಭಿ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಇನ್ನು ಕೊಲೆ ಕೃತ್ಯಕ್ಕೆ ಆಶ್ರಯ ನೀಡುವುದು ಹಾಗೂ ಸಾಕ್ಷ್ಯನಾಶಕ್ಕೆ ನೆರವಾದ ನಾಲ್ಕನೇ ಆರೋಪಿ ರೋಹಿತ್ ಕುಮಾರ್ ಅಲಿಯಾಸ್ ಶೂಟರ್ಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
ನ್ಯಾಯಾಧೀಶ ರಾಜೇಶ್ ಮಾರುತಿ ಕಾಮತೆ ಅವರು ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, ಅಪರಾಧಿಗಳಿಗೆ ಒಟ್ಟು ₹70 ಸಾವಿರ ದಂಡ ವಿಧಿಸಿದ್ದಾರೆ. ಈ ಪೈಕಿ ₹50 ಸಾವಿರವನ್ನು ಮೃತ ರಾಕೇಶ್ ಅವರ ತಂದೆಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ.
ಘಟನೆಯ ಹಿನ್ನೆಲೆ:
2019ರ ಜನವರಿ 3ರಂದು ಮಂಗಳೂರಿನ ಪಂಜಿಮೊಗರು ಮಾಲಾಡಿ ರಸ್ತೆಯ ಎಂ.ವಿ. ಶೆಟ್ಟಿ ಕಾಲೇಜು ಸಮೀಪ ರಾಕೇಶ್ ಎಂಬ ಯುವಕನನ್ನು ಅಡ್ಡಗಟ್ಟಿದ್ದ ಆರೋಪಿಗಳು ತಲವಾರುಗಳಿಂದ ಮನಬಂದಂತೆ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದರು.
ಮೊದಲ ಆರೋಪಿ ಸುನೀಲ್ ಕುಮಾರ್ನ ತಂಗಿಯನ್ನು ರಾಕೇಶ್ ಪ್ರೀತಿಸುತ್ತಿದ್ದ ಎಂಬ ದ್ವೇಷವೇ ಈ ಕೊಲೆಗೆ ಪ್ರಮುಖ ಕಾರಣವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಸುಮಾರು ಏಳು ವರ್ಷಗಳ ಬಳಿಕ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇದೀಗ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಮತ್ತೊಬ್ಬ ಆರೋಪಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಪ್ರಕಟಿಸುವ ಮೂಲಕ ನ್ಯಾಯಾಲಯ ತೀರ್ಪು ನೀಡಿದೆ.