ಕರ್ನಾಟಕ

ಹುಬ್ಬಳ್ಳಿ ಜೆ.ಸಿ. ನಗರ ಮುಖ್ಯ ರಸ್ತೆಯಲ್ಲೇ ಬೇಕಾಬಿಟ್ಟಿ ಪಾರ್ಕಿಂಗ್!

ಮೂಲಕ News Desk | ಪ್ರಕಟಿಸಲಾಗಿದೆ November 7, 2026 November 7, 2026 | 10:45 AM 67 ವೀಕ್ಷಣೆಗಳು

ವಾಹನ ಸವಾರರಿಗೆ ಸಂಚಾರ ಸಂಕಷ್ಟ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ


ಹುಬ್ಬಳ್ಳಿ: ನಗರದ ಜೆ.ಸಿ. ನಗರ ಮುಖ್ಯ ರಸ್ತೆಯಲ್ಲಿ, ಗ್ಯಾಲಕ್ಸಿ ಮಾಲ್ ಎದುರುಗಡೆಯೇ ವಾಹನಗಳನ್ನು ಬೇಕಾಬಿಟ್ಟಿಯಾಗಿ ರಸ್ತೆಯಲ್ಲೇ ಪಾರ್ಕಿಂಗ್ ಮಾಡುತ್ತಿರುವುದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.


ಮುಖ್ಯ ರಸ್ತೆಯಲ್ಲಿಯೇ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಈಗಾಗಲೇ ವಾಹನ ದಟ್ಟಣೆಯಿಂದ ಕೂಡಿರುವ ಈ ರಸ್ತೆಯಲ್ಲಿ ಇಂತಹ ಬೇಕಾಬಿಟ್ಟಿ ಪಾರ್ಕಿಂಗ್‌ನಿಂದ ಇತರ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.


ರಸ್ತೆಯಲ್ಲಿಯೇ ವಾಹನಗಳನ್ನು ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ಅನಗತ್ಯ ಕಿರಿಕಿರಿ ಉಂಟಾಗುತ್ತಿದ್ದು, ಕೆಲವೊಮ್ಮೆ ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ಸಾರ್ವಜನಿಕ ರಸ್ತೆಯನ್ನೇ ಪಾರ್ಕಿಂಗ್ ಸ್ಥಳವನ್ನಾಗಿ ಬಳಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಈ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಸಂಚಾರಿ ಪೊಲೀಸ್ ಅಧಿಕಾರಿಗಳು ಗಮನಹರಿಸಿ, ರಸ್ತೆಯಲ್ಲಿನ ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಬೇಕು. ವಾಹನ ಸವಾರರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.