ಕ್ರೈಂ

ಹುಬ್ಬಳ್ಳಿಯ ಗಬ್ಬೂರ ಸರ್ಕಲ್‌ನಲ್ಲಿ ಕತ್ತಿ ತೋರಿಸಿ ಸಾರ್ವಜನಿಕರಿಗೆ ಬೆದರಿಕೆ: ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್‌ನಿಂದ ಆರೋಪಿ ಬಂಧನ

ಮೂಲಕ News Desk | ಪ್ರಕಟಿಸಲಾಗಿದೆ November 16, 2026 November 16, 2026 | 02:56 PM 110 ವೀಕ್ಷಣೆಗಳು

ಹುಬ್ಬಳ್ಳಿ: ನಗರದ ಗಬ್ಬೂರ ಸರ್ಕಲ್‌ನಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಕತ್ತಿ ತೋರಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ಆರೋಪಿಯನ್ನು ಬೆಂಡಿಗೇರಿ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ತಂಡ ಬಂಧಿಸಿದೆ.


ದಿನಾಂಕ 15-11-2026ರಂದು ರಾತ್ರಿ ಸುಮಾರು 11:15 ಗಂಟೆಯ ವೇಳೆಯಲ್ಲಿ ಹುಬ್ಬಳ್ಳಿಯ ಗಬ್ಬೂರ ಸರ್ಕಲ್‌ನ ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಅಪರಾಧ ಎಸಗುವ ಉದ್ದೇಶದಿಂದ ಕತ್ತಿ ತೋರಿಸಿ ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.


ತಕ್ಷಣ ಕಾರ್ಯಪ್ರವೃತ್ತರಾದ ಬೆಂಡಿಗೇರಿ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ಈಶ್ವರ ನಗರ, ಹಳೇ ಹುಬ್ಬಳ್ಳಿಯ ನಿವಾಸಿ ಖ್ವಾಜಾಹುಸೇನ ನದಾಫ ಎಂದು ಗುರುತಿಸಲಾಗಿದೆ.


ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಒಂದು ಕತ್ತಿ ಹಾಗೂ ಒಂದು ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2026ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ-1959ರ ಕಲಂ 27(1)ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.


ಇನ್ನು ಆರೋಪಿಯೊಂದಿಗೆ ಇದ್ದ ಇನ್ನಿಬ್ಬರು ಆರೋಪಿತರು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.


ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಭಯದ ವಾತಾವರಣ ಸೃಷ್ಟಿಸುವವರ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಗಬ್ಬೂರ ಸರ್ಕಲ್‌ನಲ್ಲಿ ನಡೆದ ಈ ಕಾರ್ಯಾಚರಣೆ ಗಮನ ಸೆಳೆದಿದೆ.