ಕರ್ನಾಟಕ

ಬೆಂಡಿಗೇರಿ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೆ ಕರ್ತವ್ಯ ಲೋಪದ ಆರೋಪ!

ಮೂಲಕ News Desk | ಪ್ರಕಟಿಸಲಾಗಿದೆ November 18, 2026 November 18, 2026 | 07:25 AM 353 ವೀಕ್ಷಣೆಗಳು

ಹುಬ್ಬಳ್ಳಿ: ನಗರದ ಬೆಂಡಿಗೇರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಆರ್. ನಾಯಕ ಅವರ ಕಾರ್ಯವೈಖರಿ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಕರ್ತವ್ಯ ಲೋಪ, ದೂರುದಾರರಿಗೆ ಸಮರ್ಪಕವಾಗಿ ಸ್ಪಂದಿಸದಿರುವುದು ಸೇರಿದಂತೆ ಹಲವು ಆರೋಪಗಳು ಇನ್ಸ್‌ಪೆಕ್ಟರ್ ವಿರುದ್ಧ ಕೇಳಿಬರುತ್ತಿದ್ದು, ಪೊಲೀಸ್ ಇಲಾಖೆಯ ಜವಾಬ್ದಾರಿಯುತ ಕಾರ್ಯನಿರ್ವಹಣೆಯ ಕುರಿತು ಪ್ರಶ್ನೆಗಳು ಮೂಡಿವೆ.


ಇತ್ತೀಚೆಗೆ ಗಂಗಾಧರ ನಗರದ ಲೋಕೇಶ ಜಾದವ್ ಅವರು ಪತ್ರಿಕಾಗೋಷ್ಠಿ ನಡೆಸಿ, ಶಾಮ ಜಾದವ್ ಹಾಗೂ ಆತನ ಸಹಚರರಿಂದ ತಮ್ಮ ಕುಟುಂಬದ ಸದಸ್ಯರಿಗೆ ನಿರಂತರ ಜೀವ ಬೆದರಿಕೆ ಹಾಗೂ ಹಲ್ಲೆಯ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.


ಕಳೆದ ಹಲವು ವರ್ಷಗಳಿಂದ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಮ್ಮ ಕುಟುಂಬವನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡಲಾಗುತ್ತಿದೆ. ಕುಟುಂಬದ ಸದಸ್ಯರು ಹೊರಗೆ ಕಾಣಿಸಿಕೊಂಡಾಗಲೆಲ್ಲ ದಾಳಿ ನಡೆಸಲು ಮುಂದಾಗುತ್ತಿದ್ದಾರೆ ಎಂದು ಲೋಕೇಶ ಜಾದವ್ ದೂರಿದ್ದಾರೆ.


ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದಾಗ ಇನ್ಸ್‌ಪೆಕ್ಟರ್ ಎಸ್.ಆರ್. ನಾಯಕ ಅವರು ಸಮರ್ಪಕವಾಗಿ ಸ್ಪಂದಿಸಿಲ್ಲ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.


ನವೆಂಬರ್ 17ರಂದು ತಮ್ಮ ಕುಟುಂಬದ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆದಿದ್ದರೂ, ಆರಂಭದಲ್ಲಿ ದೂರು ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ. ನಂತರ ಪೊಲೀಸ್ ಆಯುಕ್ತರ ಗಮನಕ್ಕೆ ತಂದ ಬಳಿಕ ಅವರ ಸೂಚನೆಯ ಮೇರೆಗೆ ದೂರು ದಾಖಲಾಗಿದೆ ಎಂದು ಲೋಕೇಶ ಜಾದವ್ ತಿಳಿಸಿದ್ದಾರೆ.


ಇದೇ ಮೊದಲ ಬಾರಿಗೆ ಇನ್ಸ್‌ಪೆಕ್ಟರ್ ವಿರುದ್ಧ ಇಂತಹ ಆರೋಪಗಳು ಕೇಳಿಬಂದಿಲ್ಲ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ದೂರುದಾರರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡದಿರುವುದು ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಠಾಣೆಯ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಬೇಕೆಂಬ ಒತ್ತಾಯ ವ್ಯಕ್ತವಾಗುತ್ತಿದೆ.


ಠಾಣೆಯ ಕಾರ್ಯವೈಖರಿ ಸುಧಾರಣೆಗೆ ಆಗ್ರಹ


ಸೆಟ್ಲಮೆಂಟ್ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ ಇಂತಹ ಗಂಭೀರ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಮೌನ ವಹಿಸದೆ ಸೂಕ್ತ ತನಿಖೆ ನಡೆಸಬೇಕೆಂಬ ಆಗ್ರಹ ಕೇಳಿಬಂದಿದೆ.


ಬೆಂಡಿಗೇರಿ ಪೊಲೀಸ್ ಠಾಣೆಗೆ ದಕ್ಷ ಹಾಗೂ ಜನಸ್ನೇಹಿ ಅಧಿಕಾರಿಯನ್ನು ನೇಮಿಸಬೇಕು. ಇನ್ಸ್‌ಪೆಕ್ಟರ್ ಎಸ್.ಆರ್. ನಾಯಕ ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂದು ಲೋಕೇಶ ಜಾದವ್ ಅವರು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.


ಪೊಲೀಸ್ ಇಲಾಖೆಯ ಮುಂದಿರುವ ಪ್ರಶ್ನೆಗಳು:


- ದೂರು ನೀಡಲು ಬರುವ ಸಾರ್ವಜನಿಕರಿಗೆ ಠಾಣೆಯಲ್ಲಿ ಸಮರ್ಪಕ ಸ್ಪಂದನೆ ಸಿಗುತ್ತಿದೆಯೇ?

- ಗಂಭೀರ ಆರೋಪಗಳಿರುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುತ್ತಿದೆಯೇ?

- ಇನ್ಸ್‌ಪೆಕ್ಟರ್ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ?

- ಸೆಟ್ಲಮೆಂಟ್ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ?


ಈ ಎಲ್ಲಾ ಆರೋಪಗಳ ಕುರಿತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಿ ವಾಸ್ತವಾಂಶವನ್ನು ಬಹಿರಂಗಪಡಿಸಬೇಕಿದೆ. ಇನ್ಸ್‌ಪೆಕ್ಟರ್ ಅವರಿಂದಲೂ ಈ ಆರೋಪಗಳಿಗೆ ಸ್ಪಷ್ಟನೆ ಬರಬೇಕಿದೆ.


ಪತ್ರಿಕಾಗೋಷ್ಠಿಯಲ್ಲಿ ಜಶ್ವಂತ್ ಜಾದವ್, ಸಹದೇವಪ್ಪ ಹಾಗೂ ಬಸವರಾಜ ಉಪಸ್ಥಿತರಿದ್ದರು.