ಬೆಳಗಾವಿ: ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ನಿರಂತರ ಕಾರ್ಯಾಚರಣೆ ಮುಂದುವರಿಸಿದ್ದು, ಇದೀಗ ಮತ್ತೊಂದು ಯಶಸ್ವಿ ದಾಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 48ರ ಸರ್ವಿಸ್ ರಸ್ತೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಮಹಾರಾಷ್ಟ್ರ ಮೂಲದ ಸೈಯ್ಯದ್ ನಿಸಾರ್ ಸೈಯ್ಯದ್ ಇಸಾಕ್ (40) ಎಂಬಾತನನ್ನು ಬಂಧಿಸಲಾಗಿದೆ.
ಬಂಧಿತನಿಂದ ಸುಮಾರು 6 ಕೆಜಿ 145 ಗ್ರಾಂ ಗಾಂಜಾ, ಒಂದು ವಿವೋ ಮೊಬೈಲ್ ಫೋನ್ ಸೇರಿದಂತೆ ಒಟ್ಟು ₹3.10 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯವೇ ಸುಮಾರು ₹3.05 ಲಕ್ಷ ಎಂದು ಅಂದಾಜಿಸಲಾಗಿದೆ.
ಸಿಸಿಬಿ ಇನ್ಸ್‌ಪೆಕ್ಟರ್ ಮಂಜುನಾಥ ನಾಯಕ, ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿ ತಂಡದ ಕಾರ್ಯಾಚರಣೆಯಲ್ಲಿ ಈ ಯಶಸ್ಸು ದೊರೆತಿದೆ. ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಅವರು ಸಿಸಿಬಿ ತಂಡದ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಹಿನ್ನೆಲೆ ಹಾಗೂ ಗಾಂಜಾ ಪೂರೈಕೆ ಜಾಲದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.