ಧಾರವಾಡ: ಜಿಲ್ಲೆಯ ಉಪ್ಪಿನ ಬೆಟಗೇರಿ ಪ್ರದೇಶದ ಕಟುಕರ ಓಣಿಯಲ್ಲಿ ಅಕ್ರಮವಾಗಿ ಹಸು, ಆಕಳು ಹಾಗೂ ಕರುಗಳನ್ನು ಕಡಿದು ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ, ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ದಾಳಿ ನಡೆಸಿದ ಘಟನೆ ನಡೆದಿದೆ.
ದಾಳಿಯ ವೇಳೆ ಸ್ಥಳದಲ್ಲಿ ಗೋವುಗಳ ಚರ್ಮ, ಮಾಂಸ ಸೇರಿದಂತೆ ವಿವಿಧ ಅವಶೇಷಗಳನ್ನು ಬಕೆಟ್ ಹಾಗೂ ಬ್ಯಾರೆಲ್‌ಗಳಲ್ಲಿ ಸಂಗ್ರಹಿಸಿಟ್ಟಿರುವುದು ಕಂಡುಬಂದಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಸ್ಥಳದಲ್ಲಿದ್ದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಮಾಂಸ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧವಾಗಿ ಅಕ್ರಮ ಗೋಹತ್ಯೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಕುರಿತು ಕ್ರಮ ಕೈಗೊಳ್ಳುವಂತೆ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಪ್ರಕರಣ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.