ಕರ್ನಾಟಕ

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ಆತ್ಮಹತ್ಯೆ

ಮೂಲಕ News Desk | ಪ್ರಕಟಿಸಲಾಗಿದೆ May 28, 2026 May 28, 2026 | 09:27 AM 154 ವೀಕ್ಷಣೆಗಳು

ಚನ್ನಮ್ಮ ನಗರದಲ್ಲಿನ ಮನೆಯಲ್ಲಿ ನೇಣು ಬಿಗಿದುಕೊಂಡು ಜೀವಾಂತ್ಯ

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲೆ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗುರುವಾರ ಬೆಳಗಾವಿಯ ಚನ್ನಮ್ಮ ನಗರದಲ್ಲಿ ನಡೆದಿದೆ.


ಮಾಹಿತಿ ಪ್ರಕಾರ, ಶ್ರೀಶೈಲ ಚೌಗಲೆ ಅವರು ತಮ್ಮ ಮನೆಯ ಕೊಠಡಿಯಲ್ಲಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದರು. ಸಾಕಷ್ಟು ಸಮಯವಾದರೂ ಬಾಗಿಲು ತೆರೆಯದ ಹಿನ್ನೆಲೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಚೌಗಲೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.


ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.


ಈ ಕುರಿತು ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತರ ಆತ್ಮಹತ್ಯೆಗೆ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.